Ticker

6/recent/ticker-posts

Ad Code

Responsive Advertisement

*ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ: ಮೂರು ವರ್ಷದಲ್ಲಿ 69 ಶಾಲೆಗಳು ಕ್ಲೋಸ್*******


*ಚಿಕ್ಕಮಗಳೂರು:* ಪ್ರತಿಯೊಂದು ಮಗುವು ಉಚಿತ ಶಿಕ್ಷಣ ಪಡೆದುಕೊಳ್ಳಬೇಕು. ಯಾರೊಬ್ಬರೂ ಶಿಕ್ಷಣದಿಂದ  ವಂಚಿತರಾಗಬಾರದೆಂಬ ಉದ್ದೇಶದಿಂದ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ ಸರ್ಕಾರಿ ಶಾಲೆಗಳಿಗೆ  ಸಕಲ‌ ಸೌಲಭ್ಯಗಳನ್ನು ಕೊಡುತ್ತಿದೆ. ಆದರೆ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಇದೀಗ ಜಿಲ್ಲೆಯ 23 ಶಾಲೆಗಳಿಗೆ ಬೀಗ ಜಡಿಯೋದಕ್ಕೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ದಾನಗಳಲ್ಲಿ ಶ್ರೇಷ್ಠವಾದದ್ದು ವಿದ್ಯಾದಾನ ಎಂಬ ಮಾತಿದೆ. ಗ್ರಾಮದಲ್ಲಿ ದೇವಾಲಯ ಇಲ್ಲದೆ ಇದ್ದರೂ ಶಾಲೆ ಇರಬೇಕು ಎಂದು ಹಿರಿಯರು ಹೇಳುತ್ತಾರೆ. ಸರ್ಕಾರಿ ಶಾಲೆ ಬೇಕು ಎಂದು ಅದೆಷ್ಟೋ ಗ್ರಾಮಗಳಲ್ಲಿ ಇಂದಿಗೂ ಹೋರಾಟ ನಡೆಯುತ್ತಲೇ ಇದೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತ್ರ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳನ್ನ ಸರ್ಕಾರ ಬಾಗಿಲು ಹಾಕಿಸುತ್ತಿದೆ. ಕಳೆದ 3 ವರ್ಷಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 69 ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಾಗಿಲು ಬಂದ್ ಮಾಡಲಾಗಿದೆ. 2022-23ರಲ್ಲಿ 24, ಕಳೆದ‌ ವರ್ಷ ಅಂದರೆ 2023-24ರ ಸಾಲಿನಲ್ಲಿ 22 ಶಾಲೆಗಳನ್ನ ಮುಚ್ಚಲಾಗಿತ್ತು. ಈ ವರ್ಷ 23 ಶಾಲೆಗಳಿಗೆ ಸರ್ಕಾರ ಬೀಗ ಹಾಕಿಸಿದೆ. ಕಳೆದ‌ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಿದ್ಯಾರ್ಥಿಗಳನ್ನ ಸರ್ಕಾರಿ ಶಾಲೆಗಳಿಗೆ ಸೇರಿಸಲು ಪೋಷಕರು ಹಿಂದೇಟು ಹಾಕಿದ್ದು, ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಗಣನೀಯವಾಗಿ ಕಡಿಮೆಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಖಾಸಗಿ ಶಾಲೆಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಕೊರತೆಯ ನೆಪವೊಡ್ಡಿ ವರ್ಷದಿಂದ ವರ್ಷಕ್ಕೆ ಸರ್ಕಾರ ಸರ್ಕಾರಿ ಶಾಲೆಗಳ ಬಾಗಿಲು ಹಾಕಿಸುತ್ತಿದೆ. ಸರ್ಕಾರ ಮೂಲಭೂತ ಸೌಕರ್ಯಗಳನ್ನ ಸರ್ಕಾರಿ ಶಾಲೆಗಳಿಗೆ ಕಲ್ಪಿಸದ ಹಿನ್ನೆಲೆ ಪೋಷಕರು ಖಾಸಗಿ ಶಾಲೆಗಳ ಮೊರೆ ಹೋಗುತ್ತಿದ್ದಾರೆ. ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಬಾಗಿಲು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಶಾಲೆಗಳಲ್ಲಿ ಉತ್ತಮ ಕಟ್ಟಡ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದ್ದು, ಉತ್ತಮ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ ಎಂಬ ಆರೋಪಿಗಳಿವೆ. ಜಿಲ್ಲೆಯಾದ್ಯಂತ ಕಳೆದ ಎರಡು ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಕಾಣಿಸುತ್ತಿದೆ.

Post a Comment

0 Comments